ರಾಮನಗರ: ‘ಪ್ರಾಮಾಣಿಕವಾಗಿ ಕೆಲಸ ಮಾಡುವ ಮೂಲಕ ಸರ್ಕಾರದ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ’ ಎಂದು ಶಾಸಕಿ ಅನಿತಾ ಕುಮಾರಸ್ವಾಮಿ ಹೇಳಿದರು.
ಇಲ್ಲಿನ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ‘ಹಲವು ಇಲಾಖೆಗಳ ಅಧಿಕಾರಿಗಳು ಸಭೆಗೆ ಸರಿಯಾದ ಮಾಹಿತಿಯೊಂದಿಗೆ ಬಂದಿರಲಿಲ್ಲ, ಮುಂದಿನ ಸಭೆಗೆ ಸಮರ್ಪಕವಾದ ಮಾಹಿತಿಯೊಂದಿಗೆ ಬನ್ನಿ, ಇಲ್ಲದಿದ್ದರೆ ಕ್ರಮಕೈಗೊಳ್ಳುತ್ತೇನೆ ಎಂದು ಎಚ್ಚರಿಸಿದ್ದೇನೆ’ ಎಂದು ತಿಳಿಸಿದರು.
‘ತಾಲ್ಲೂಕಿನಲ್ಲಿ ಮೂಲ ಸೌಕರ್ಯ ಕಲ್ಪಿಸಲು ಹಾಗೂ ಜನರ ಸಮಸ್ಯೆ ಬಗೆಹರಿಸಲು ಮೊದಲ ಆದ್ಯತೆ ನೀಡಲು ಸೂಚಿಸಿದ್ದೇನೆ. ಜನಸಾಮಾನ್ಯರಿಗೆ ತೊಂದರೆ
ಯಾಗದಂತೆ ಕಾರ್ಯನಿರ್ವಹಿಸಲು ಹೇಳಿದ್ದೇನೆ. ನಗರಸಭೆ, ತಹಶೀಲ್ದಾರ್ ಕಚೇರಿ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ನಡೆಯುತ್ತಿರುವ ಲಂಚ ಹಾಗೂ ಭ್ರಷ್ಟಾಚಾರವನ್ನು ಅಧಿಕಾರಿಗಳು ನಿಲ್ಲಿಸಬೇಕು. ಜನರಿಂದ ಯಾವುದೇ ರೀತಿಯ ನಿರೀಕ್ಷೆ ಇಟ್ಟುಕೊಳ್ಳದೆ ಕೆಲಸ ಮಾಡಬೇಕು’ ಎಂದು ತಿಳಿಸಿದರು.
‘ರೈತರ ಸಮಸ್ಯೆಗಳನ್ನು ಬಗೆಹರಿಸಲು ಹಾಗೂ ಬಗರ್ಹುಕಂ ಸಾಗುವಳಿ ಚೀಟಿ ವಿತರಿಸುವಂತೆ ಅಧಿಕಾರಿಗಳಿಗೆ ಹೇಳಿದ್ದೇನೆ’ ಎಂದು ಅವರು ಹೇಳಿದರು