ಉಡುಪಿ: ವಿಧಾನ ಪರಿಷತ್ ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಸಾಧಿಸಿದ್ದ ಆದಿಪತ್ಯ ಅಂತ್ಯಗೊಂಡಿದೆ. ಮೊದಲ ಬಾರಿ ಜೆಡಿಎಸ್‌ ಪಕ್ಷದ ಜಯದ ಪತಾಕೆ ಹಾರಿಸುವ ಮೂಲಕ ಬಿಜೆಪಿಯ ಭದ್ರ ಕೋಟೆಯನ್ನು ಛಿದ್ರಗೊಳಿಸಿದೆ ಎಂದು ಜೆಡಿಎಸ್‌ ಜಿಲ್ಲಾಧ್ಯಕ್ಷ ಯೋಗೀಶ್‌ ಶೆಟ್ಟಿ ಕಾಪು ತಿಳಿಸಿದರು.

ನಗರದ ಚಿತ್ತರಂಜನ್‌ ವೃತ್ತದಲ್ಲಿ ಬುಧವಾರ ಹಮ್ಮಿಕೊಂಡಿದ್ದ ವಿಧಾನ ಪರಿಷತ್‌ ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್‌ ಅಭ್ಯರ್ಥಿ ಎಸ್‌.ಎಲ್‌.ಭೋಜೇಗೌಡ ಅವರ ವಿಜಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ನೈರುತ್ಯ ಶಿಕ್ಷಕರ ಕ್ಷೇತ್ರದ ವ್ಯಾಪ್ತಿಗೆ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ ಜಿಲ್ಲೆಯ ಚನ್ನಗಿರಿ ಹಾಗು ಹೊನ್ನಾಳಿ ತಾಲ್ಲೂಕುಗಳು ಒಳಪಡುತ್ತವೆ. ಈ ಕ್ಷೇತ್ರದಿಂದ ಪ್ರಥಮ ಬಾರಿಗೆ ಜೆಡಿಎಸ್ ಅಭ್ಯರ್ಥಿ ಎಸ್.ಎಲ್.ಬೋಜೆಗೌಡ ಜಯ ಸಾಧಿಸುವುದರೊಂದಿಗೆ ಈ ಕ್ಷೇತ್ರದಲ್ಲಿ ಜೆಡಿಎಸ್ ನೆಲೆ ಕಂಡುಕೊಂಡಿದೆ ಎಂದರು.

ಈ ಬಾರಿ ನೈರುತ್ಯ ಕ್ಷೇತ್ರದ ಶಿಕ್ಷಕರ ಚುನಾವಣೆಯಲ್ಲಿ ಗಣೇಶ್ ಕಾರ್ಣೀಕ್ ಅವರನ್ನು ಬಿಜೆಪಿ ಕಣಕ್ಕೆ ಇಳಿಸಿತ್ತು. ಕಳೆದ ಎರಡು ಚುನಾವಣೆಗಳಲ್ಲಿ ಜಯಸಾಧಿಸಿದ್ದ ಅವರು, ಅಧಿಕಾರದ ಅಹಂಕಾರದಲ್ಲಿ ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸಿರಲಿಲ್ಲ. ಆದ್ದರಿಂದ ಶಿಕ್ಷಕರು ಅವರನ್ನು ತಿರಸ್ಕರಿಸಿದ್ದಾರೆ. ಜೆಡಿಎಸ್‌ ಅಭ್ಯರ್ಥಿ ಭೋಜೆಗೌಡರು ಶಿಕ್ಷರ ಸಮಸ್ಯೆಗೆಳಿಗೆ ಹೋರಾಟ ಮಾಡಿದ್ದಾರೆ. ಮುಂದೆಯೂ ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸುವುದಾಗಿ ಅವರು ಭರವಸೆ ನೀಡಿರುವುದಾಗಿ ಯೋಗೀಶ್‌ ಶೆಟ್ಟಿ ತಿಳಿಸಿದರು.

ವಿಧಾನ ಪರಿಷತ್‌ ಚುನಾವಣೆಯ ಫಲಿತಾಂಶ ಜೆಡಿಎಸ್‌ ಪಕ್ಷದ ಆತ್ಮಸ್ಥೈರ್ಯವನ್ನು ಹೆಚ್ಚಿಸಿದೆ. ಉಡುಪಿ ಜಿಲ್ಲೆಯಲ್ಲಿ ಮುಂಬರುವ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಜೆಡಿಎಸ್‌ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ತಳಮಟ್ಟದಿಂದ ಪಕ್ಷವನ್ನು ಕಟ್ಟುತ್ತೇವೆ. ರಾಜ್ಯದಲ್ಲಿ ಎಚ್‌.ಡಿ.ಕುಮಾರಸ್ವಾಮಿ ನೇತೃತ್ವದ ಜೆಡಿಎಸ್‌ ಸರ್ಕಾರ ಅಸ್ತಿತ್ವದಲ್ಲಿ ಇರುವುದರಿಂದ ಜಿಲ್ಲೆಗೆ ಅಗತ್ಯವಿರುವ ಅಭಿವೃದ್ಧಿ ಕೆಲಸವನ್ನು ಪಕ್ಷ ಕೈಗೊಳ್ಳಲಿದೆ ಎಂದರು.

ಜೆಡಿಎಸ್‌ ರಾಜ್ಯ ಪ್ರಧಾನ ಕಾರ್ಯದರ್ಶಿ ಜಯಕುಮಾರ್‌ ಪರ್ಕಳ, ಉಡುಪಿ ಬ್ಲಾಕ್‌ ಅಧ್ಯಕ್ಷ ಅಬ್ದುಲ್‌ ಖಾದರ್‌, ಕಾರ್ಯದರ್ಶಿ ಜಯಕರ್‌ ಪೂಜಾರಿ, ಉಪಾಧ್ಯಕ್ಷ ವೆಂಕಟೇಶ್‌, ಪ್ರಧಾನ ಕಾರ್ಯದರ್ಶಿ ಜಯರಾಂ ಆಚಾರ್ಯ, ಮಹಿಳಾ ಘಟಕದ ಅಧ್ಯಕ್ಷೆ ಅನಿತಾ ಶೆಟ್ಟಿ, ವೀಕ್ಷಕ ಸುಧಾಕರ್‌ ಶೆಟ್ಟಿ ಅವರು ಉಪಸ್ಥಿತರಿದ್ದರು.

By R

You missed