ಬೀದರ್‌: ‘ಬೀದರ್‌ ಜಿಲ್ಲೆಯಲ್ಲಿ ಶಾಶ್ವತ ನೀರಾವರಿಗೆ ಯೋಜನೆ ರೂಪಿಸ ಲಾಗುವುದು. ಬಚಾವತ್‌ ಆಯೋಗದ ತೀರ್ಪಿನ ಪ್ರಕಾರ ಅಗತ್ಯ ನೀರು ಬಳಕೆಗೆ ಕ್ರಮ ಕೈಗೊಳ್ಳಲಾಗುವುದು’ ಎಂದು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಭರವಸೆ ನೀಡಿದರು.

ನಗರದ ನೆಹರೂ ಕ್ರೀಡಾಂಗಣದಲ್ಲಿ ಗುರುವಾರ 65ನೇ ಸಹಕಾರ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಜಿಲ್ಲೆಯಲ್ಲಿ ಬರ ಪರಿಹಾರ ಕಾಮಗಾರಿ ತ್ವರಿತಗತಿಯಲ್ಲಿ ಕೈಗೊಳ್ಳ ಬೇಕು. ಕುಡಿಯುವ ನೀರು ಮತ್ತು ಮೇವಿನ ಕೊರತೆಯಾಗದಂತೆ ನೋಡಿ ಕೊಳ್ಳಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು

‘ಕಾರಂಜಾ ನೀರಾವರಿ ಯೋಜನೆ ಮುಳುಗಡೆ ಸಂತ್ರಸ್ತರ ಬೇಡಿಕೆ ಆದಷ್ಟು ಬೇಗ ಈಡೇರಿಸಲಾಗುವುದು. ಹೈದರಾ ಬಾದ್ ಕರ್ನಾಟಕ ಭಾಗದ ಅಭಿವೃದ್ಧಿಗೆ ಸಮ್ಮಿಶ್ರ ಸರ್ಕಾರ ಬದ್ಧವಾಗಿದೆ. ಇಲ್ಲಿ ಕೃಷಿ ಉಪಕರಣ ತಯಾರಿಸುವ ಯೋಜನೆ ಸಿದ್ಧಪಡಿಸಲಾಗಿದೆ’ ಎಂದು ತಿಳಿಸಿದರು.

‘ಸರ್ಕಾರ ರೈತರ ₹ 45 ಸಾವಿರ ಕೋಟಿ ಸಾಲ ಮನ್ನಾ ಮಾಡಿದೆ. ಸಾಲ ಮನ್ನಾ ವಿಷಯದಲ್ಲಿ ಕೆಲವರು ರೈತರಲ್ಲಿ ಸಂಶಯ ಮೂಡಿಸುವ ರೀತಿಯಲ್ಲಿ ಹೇಳಿಕೆ ನೀಡುತ್ತಿದ್ದಾರೆ. ರೈತರು ಅಂತಹ ಹೇಳಿಕೆಗಳಿಗೆ ಕಿವಿಗೊಡಬಾರದು. ಮನ್ನಾ ಮಾಡಲಾದ ಸಾಲ ಮಧ್ಯವರ್ತಿಗಳ ಪಾಲಾಗಬಾರದು. ಈ ನಿಟ್ಟಿನಲ್ಲಿ ಹಿರಿಯ ಐಎಎಸ್ ಅಧಿಕಾರಿ ಯೊಬ್ಬರ ನೇತೃತ್ವದಲ್ಲಿ ನಿಯಮಾವಳಿ ಸಿದ್ಧಪಡಿಸಲಾಗುತ್ತಿದೆ. ಈ ಕಾರಣಕ್ಕಾಗಿ ಸಾಲ ಮನ್ನಾ ಹಣ ಬಿಡುಗಡೆಗೆ ವಿಳಂಬ ಆಗುತ್ತಿದೆ’ ಎಂದು ಸ್ಪಷ್ಟಪಡಿಸಿದರು.

‘12 ವರ್ಷಗಳ ಹಿಂದೆ ಬೀದರ್‌ನಲ್ಲಿ ನಾನು ಸಾಲ ಮನ್ನಾ ಘೋಷಣೆ ಮಾಡಿದ್ದೆ. ಅಂದಿನ ಜೆಡಿಎಸ್–ಬಿಜೆಪಿ ಸಮ್ಮಿಶ್ರ ಸರ್ಕಾರದ ಹಣಕಾಸು ಸಚಿವರಾಗಿದ್ದ ಬಿ.ಎಸ್. ಯಡಿಯೂರಪ್ಪ ಸಾಲ ಮನ್ನಾಕ್ಕೆ ಹಣ ಎಲ್ಲಿಂದ ತರಬೇಕು ಎಂದು ಪ್ರಶ್ನೆ ಮಾಡಿದ್ದು ಜನರಿಗೆ ಈಗಲೂ ನೆನಪಿದೆ. ಬಿಜೆಪಿ ಸರ್ಕಾರ ಇರುವ ಉತ್ತರಪ್ರದೇಶ ಮತ್ತು ಮಹಾರಾಷ್ಟ್ರದಲ್ಲಿ ಘೋಷಣೆ ಯಾದ ಸಾಲ ಇನ್ನೂ ಮನ್ನಾ ಆಗಿಲ್ಲ. ಬಿಜೆಪಿಯವರು ಈಗಿನ ಸಮ್ಮಿಶ್ರ ಸರ್ಕಾರದ ಕಾಯಕ್ರಮಗಳ ಬಗ್ಗೆ ವಿನಾಕಾರಣ ಅಪಪ್ರಚಾರ ಮಾಡುತ್ತಿದ್ದಾರೆ’ ಎಂದು ಟೀಕಿಸಿದರು.

‘ಬ್ಯಾಂಕ್ ಸಾಲ ಪಡೆದ ರೈತರಿಗೆ ಕಿರುಕುಳ ನೀಡದಂತೆ ಈಗಾಗಲೇ ಎಲ್ಲ ಬ್ಯಾಂಕ್‌ಗಳಿಗೆ ಸೂಚಿಸಲಾಗಿದೆ. ಅದಾಗಿಯೂ ನೋಟಿಸ್ ಕೊಟ್ಟರೆ ಅಂತಹ ಬ್ಯಾಂಕ್‌ ಮ್ಯಾನೇಜರ್‌ಗಳನ್ನು ಬಂಧಿಸಲು ಪೊಲೀಸರಿಗೆ ಆದೇಶ ನೀಡಲಾಗಿದೆ’ ಎಂದು ಹೇಳಿದರು.

‘ಚುನಾವಣೆಗೆ ಮೊದಲು ಜನರಿಗೆ ನೀಡಿದ ಭರವಸೆಯಂತೆ 65 ವರ್ಷ ಮೇಲ್ಪಟ್ಟವರ ಮಾಸಾಶನ ₹ 1,000ಕ್ಕೆ ಹೆಚ್ಚಿಸಲಾಗಿದೆ. ಗರ್ಭಿಣಿ ಮಹಿಳೆಯರಿಗೆ 6 ರಿಂದ 12 ತಿಂಗಳ ತನಕ ಮಾಸಿಕ ₹ 2000 ಕೊಡಲಾಗುವುದು. ಬೀದಿ ವ್ಯಾಪಾರಿಗಳಿಗೆ ₹ 1,000 ದಿಂದ ₹ 10 ಸಾವಿರ ವರೆಗೆ ಬಡ್ಡಿ ರಹಿತ ಸಾಲ ಕೊಡುವ ’ಬಡವರ ಬಂಧು’ ಯೋಜನೆ ಮುಂದಿನ ತಿಂಗಳು ಜಾರಿಗೊಳಿ ಸಲಾಗುವುದು’ ಎಂದು ತಿಳಿಸಿದರು.

‘ರೈತರನ್ನು ಸದೃಢರಾಗಿ ಮಾಡಲು ಸರ್ಕಾರ ಉದ್ದೇಶಿಸಿದೆ. ಈ ನಿಟ್ಟಿನಲ್ಲಿ ಕೃಷಿ ಪದ್ಧತಿಯಲ್ಲಿ ಬದಲಾವಣೆ ಅಗತ್ಯ ವಾಗಿದೆ. ಇಡೀ ದೇಶಕ್ಕೆ ಮಾದರಿಯಾಗುವ ಕೃಷಿ ಪದ್ಧತಿ ಜಾರಿಗೆ ತರುವ ಚಿಂತನೆ ನಡೆದಿದೆ’ ಎಂದು ಹೇಳಿದರು.

ಜಿಲ್ಲಾ ಉಸ್ತುವಾರಿ ಸಚಿವ ಬಂಡೆಪ್ಪ ಕಾಶೆಂಪೂರ, ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರಿಗೆ ಜಿಲ್ಲೆಯ ಬಗ್ಗೆ ಕಾಳಜಿ ಇದೆ. ಬಿಎಸ್ಎಸ್‌ಕೆ ಕಾರ್ಖಾನೆ ಪುನಶ್ಚೇತನ, ಕಾರಂಜಾ ಸಂತ್ರಸ್ತರ ಸಮಸ್ಯೆಗೆ ಶೀಘ್ರದಲ್ಲಿ ಪರಿಹಾರ ಕಲ್ಪಿಸಲಿದ್ದಾರೆ. ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಜನಪ್ರತಿನಿಧಿಗಳು ಪಕ್ಷ ಬೇಧ ಮರೆತು ಕೆಲಸ ಮಾಡಬೇಕಿದೆ’ ಎಂದು ತಿಳಿಸಿದರು.

ಪಶು ಸಂಗೋಪನಾ ಸಚಿವ ವೆಂಕಟ ರಾವ್‌ ನಾಡಗೌಡ ಮಾತನಾಡಿ, ‘ಸಹಕಾರ ಕ್ಷೇತ್ರದಲ್ಲಿ ಸಾಕಷ್ಟು ಬದಲಾವಣೆ ಅಗಬೇಕಿದೆ. ಇತರ ಬ್ಯಾಂಕ್‌ಗಳ ಜತೆ ಸ್ಪರ್ಧಿಸಲು ಸಿದ್ಧತೆ ಮಾಡಿಕೊಳ್ಳಬೇಕು. ಯಾವುದೇ ಕಾರಣಕ್ಕೂ ಸಹಕಾರ ಕ್ಷೇತ್ರದಲ್ಲಿ ರಾಜಕೀಯ ಹಸ್ತಕ್ಷೇಪ ಇರಬಾರದು’ ಎಂದರು.
ಶಾಸಕ ಈಶ್ವರ ಖಂಡ್ರೆ ಮಾತನಾಡಿ, ‘ಬೀದರ್ ಜಿಲ್ಲೆ ಸಹಕಾರ ಕ್ಷೇತ್ರದಲ್ಲಿ ಸಾಕಷ್ಟು ಸಾಧನೆ ಮಾಡಿದೆ. ಇದರಿಂದ ಜಿಲ್ಲೆಯ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ಬದಲಾವಣೆ ಆಗಿದೆ’ ಎಂದು ಹೇಳಿದರು.

ಗಣಿ ಮತ್ತು ಭೂವಿಜ್ಞಾನ ಸಚಿವ ರಾಜಶೇಖರ ಪಾಟೀಲ, ‘ದಿವಂಗತ ಗುರುಪಾದಪ್ಪ ನಾಗಮಾರಪಳ್ಳಿ ಅವರು ಸಹಕಾರ ಕ್ಷೇತ್ರದಲ್ಲಿ ಬಹುದೊಡ್ಡ ಸಾಧನೆ ಮಾಡಿದ್ದಾರೆ’ ಎಂದರು.

ಸಂಸದ ಭಗವಂತ ಖೂಬಾ, ಶಾಸಕರಾದ ರಹೀಂಖಾನ್, ಬಿ. ನಾರಾಯಣರಾವ್‌, ವಿಧಾನ ಪರಿಷತ್‌ ಸದಸ್ಯರಾದ ಚಂದ್ರಶೇಖರ ಪಾಟೀಲ, ಅರವಿಂದ ಅರಳಿ, ಜಿ.ಪಂ. ಅಧ್ಯಕ್ಷೆ ಭಾರತಬಾಯಿ ಶೇರಿಕಾರ, ಉಪಾಧ್ಯಕ್ಷ ಡಾ. ಪ್ರಕಾಶ ಪಾಟೀಲ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಉಮಾಕಾಂತ ನಾಗಮಾರಪಳ್ಳಿ, ಉಪಾಧ್ಯಕ್ಷ ಭೀಮರಾವ್‌ ಪಾಟೀಲ, ನಗರಸಭೆ ಅಧ್ಯಕ್ಷೆ ಶಾಲಿನಿ ಚಿಂತಾಮಣಿ, ಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿ ನಾಗಲಾಂಬಿಕಾದೇವಿ, ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳ ಅಧ್ಯಕ್ಷ ಕೆ.ಎನ್. ರಾಜಣ್ಣ, ಜಿಲ್ಲಾಧಿಕಾರಿ ಡಾ. ಎಚ್‌.ಆರ್. ಮಹಾದೇವ, ಜಿ.ಪಂ.ಸಿಇಒ ಮಹಾಂತೇಶ ಬೀಳಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ. ಶ್ರೀಧರ ಉಪಸ್ಥಿತರಿದ್ದರು.

By R

You missed