ಮಾನ್ವಿ: ‘ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದ 24 ಗಂಟೆಗಳಲ್ಲಿ ರಾಜ್ಯದ ರೈತರ ಸಂಪೂರ್ಣ ಸಾಲ ಮನ್ನಾ ಮಾಡುವೆ’ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಘೋಷಿಸಿದರು.
ಸೋಮವಾರ ಪಟ್ಟಣದ ಟಿಎಪಿಸಿಎಂಎಸ್ ಆವರಣದಲ್ಲಿ ಆಯೋಜಿಸಿದ್ದ ಜೆಡಿಎಸ್ ಪಕ್ಷದ ವಿಕಾಸ ಪರ್ವ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತ ಹಾಗೂ ಜನವಿರೋಧಿ ನೀತಿಗಳನ್ನು ಅನುಸರಿಸುತ್ತಿವೆ. ನಿರಂತರ ಬರಗಾಲದಿಂದ ಸಂಕಷ್ಟದಲ್ಲಿರುವ ರೈತರಗೆ ನೆರವು ನೀಡದ ಸರ್ಕಾರಗಳು ಕಾರ್ಪೋರೆಟ್ ಕಂಪೆನಿಗಳ ಮಾಲೀಕರ ನೂರಾರು ಕೋಟಿ ರೂಪಾಯಿ ಸಾಲ ಮನ್ನಾ ಮಾಡಿವೆ. ರಾಜ್ಯದಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದರೆ ರೈತರ ₹51ಸಾವಿರ ಕೋಟಿ ಸಂಪೂರ್ಣ ಸಾಲ ಮನ್ನಾ ಮಾಡಲಾಗುವುದು. ರೈತರಿಗಾಗಿ ₹ 25ಸಾವಿರ ಕೋಟಿ ಮೀಸಲಿಟ್ಟು ರೈತರ ಸ್ಥಿತಿಗತಿ, ರೈತರ ಬೆಳೆಗಳನ್ನು ಬೆಳೆಯುವ ಕುರಿತು ಪ್ರತಿ ತಿಂಗಳು ರೈತರೊಂದಿಗೆ ಸಮಾಲೋಚನೆ ನಡೆಸುವೆ. ಐಎಎಸ್ ಅಧಿಕಾರಿಗಳಿಂದ ಸರ್ಕಾರ ನಡೆಸದೆ ರೈತರಿಂದ ಸರ್ಕಾರದ ಆಡಳಿತ ನಡೆಸಿ ತೋರಿಸುವೆ’ ಎಂದು ಹೇಳಿದರು.
‘ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ಮುಖಂಡರು ಜನಪರ ಕಾರ್ಯಕ್ರಮಗಳ ಕುರಿತು ಮಾತನಾಡದೆ, ಪರಸ್ಪರ ತೇಜೋವಧೆಯಲ್ಲಿ ತೊಡಗಿದ್ದಾರೆ. ಕರಾವಳಿ ಭಾಗದ ಅಮಾಯಕ ಯುವಕರ ಸಾವಿನ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದಾರೆ ಹೊರತು ರಾಜ್ಯದ ಸಮಸ್ಯೆಗಳ ಬಗ್ಗೆ ಕಾಳಜಿ ವಹಿಸುತ್ತಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ರಾಜ್ಯದ ಸಚಿವರು ಟಿ.ವಿ, ಪತ್ರಿಕೆಗಳಲ್ಲಿ ಜಾಹೀರಾತು ನೀಡುವಲ್ಲಿ ಮಗ್ನರಾಗಿದ್ದಾರೆ. ಅಭಿವೃದ್ಧಿ ಕಡೆ ಗಮನಹರಿಸದೆ ರಾಜ್ಯದ ಜನರ ತೆರಿಗೆ ಹಣವನ್ನು ಕೇವಲ ಜಾಹೀರಾತು ಮೂಲಕ ಪ್ರಚಾರಕ್ಕೆ ಬಳಸುತ್ತಿದ್ದಾರೆ’ ಎಂದು ಅವರು ಟೀಕಿಸಿದರು.
‘ರಾಜ್ಯದಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದರೆ ಅತೀ ಹೆಚ್ಚು ಹತ್ತಿ ಬೆಳೆಯುವ ರಾಯಚೂರು, ಯಾದಗಿರಿ, ಕಲಬರ್ಗಿ ಜಿಲ್ಲೆಗಳಲ್ಲಿ ಹತ್ತಿ ಗಿರಣಿಗಳನ್ನು ಸ್ಥಾಪಿಸುವ ಮೂಲಕ ಈ ಭಾಗದ ನಿರುದ್ಯೋಗ ಸಮಸ್ಯೆ ನಿವಾರಿಸಲಾಗುವುದು. ಬಡ ರೈತರು, ಕೃಷಿ ಕಾರ್ಮಿಕರು ಗುಳೆ ಹೋಗುವುದನ್ನು ತಪ್ಪಿಸಲಾಗುವುದು. ವಿಧವೆಯರು ಹಾಗೂ ಅಂಗವಿಕಲರ ಮಾಸಾಶನವನ್ನು ₹2 ಸಾವಿರಕ್ಕೆ ಹೆಚ್ಚಿಸಲಾಗುವುದು. 70 ವರ್ಷ ದಾಟಿದ ವೃದ್ಧರಿಗೆ ಪ್ರತಿ ತಿಂಗಳು ₹5 ಸಾವಿರ ನೆರವು ನೀಡಲಾಗುವುದು. ತುಂಗಭದ್ರಾ ಎಡದಂಡೆ ನಾಲೆಯಲ್ಲಿ ಸಮರ್ಪಕ ನೀರು ಹರಿಸಲು ಕ್ರಮ ಕೈಗೊಳ್ಳಲಾಗುವುದು. ಅಪೂರ್ಣಗೊಂಡಿರುವ ಕೃಷ್ಣಾ ಬಿ ಸ್ಕೀಮ್ ಯೋಜನೆಯ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುವುದು. ರೈತರ ಪಂಪ್ಸೆಟ್ಗಳಿಗೆ ನಿರಂತರ ವಿದ್ಯುತ್ ಪೂರೈಸಲಾಗುವುದು. ಸ್ತ್ರೀ ಶಕ್ತಿ ಸಂಘಗಳಿಗೆ ಪ್ರೋತ್ಸಾಹಧನ ಸೇರಿದಂತೆ ಎಲ್ಲಾ ವರ್ಗಗಳ ಶೈಕ್ಷಣಿಕ ಹಾಗೂ ಆರ್ಥಿಕ ಪ್ರಗತಿಗೆ ಕ್ರಮ ಕೈಗೊಳ್ಳಲಾಗುವುದು’ ಎಂದು ಅವರು ಭರವಸೆ ನೀಡಿದರು.
ಮಾಜಿ ಸಚಿವ ಬಂಡೆಪ್ಪ ಕಾಶೆಂಪೂರ ಮಾತನಾಡಿ, ‘ರೈತರ ಸಮಸ್ಯೆಗಳಿಗೆ ಸ್ಪಂದಿಸದೆ ಐದು ವರ್ಷಗಳ ಕಾಲ ನಿದ್ರೆಯಲ್ಲಿ ಕಳೆದ ರಾಜ್ಯದ ಕಾಂಗ್ರೆಸ್ ಸರ್ಕಾರ ಉದ್ರಿ ಸರ್ಕಾರವಾಗಿದೆ. ಸದಾ ಅಹಿಂದ ವರ್ಗಗಳ ಬಗ್ಗೆ ಮಾತನಾಡುವ ಮುಖ್ಯಮಂತ್ರಿ ಸಿದ್ದರಾಮಯ್ಯ, ತಮ್ಮ ಅಧಿಕಾರದಲ್ಲಿ ಅಹಿಂದ ವರ್ಗಗಳ ಅಭಿವೃದ್ಧಿಗೆ ಖರ್ಚು ಮಾಡಿದ ಅನುದಾನದ ಕುರಿತು ಕೂಡಲೇ ಶ್ವೇತಪತ್ರ ಹೊರಡಿಸಬೇಕು’ ಎಂದು ಒತ್ತಾಯಿಸಿದರು.
ಮಾನ್ವಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ರಾಜಾ ವೆಂಕಟಪ್ಪ ನಾಯಕ ಮಾತನಾಡಿ, ‘ಸ್ಥಳೀಯ ಶಾಸಕರು ತುಂಗಭದ್ರಾ ಕಾಡಾ ಅಧ್ಯಕ್ಷರಾಗಿದ್ದರೂ ತುಂಗಭದ್ರಾ ಎಡದಂಡೆ ನಾಲೆ ವ್ಯಾಪ್ತಿಯ ಕೊನೆ ಭಾಗದ ಜಮೀನುಗಳಿಗೆ ನೀರು ತಲುಪಿಸುವಲ್ಲಿ ವಿಫಲರಾಗಿದ್ದಾರೆ. ಕ್ಷೇತ್ರದ ರೈತರ ಹಿತಕ್ಕಾಗಿ ಚುನಾವಣೆಯಲ್ಲಿ ನನ್ನನ್ನು ಆಯ್ಕೆ ಮಾಡಬೇಕು. ಶಾಸಕನಾಗಿ ಆಯ್ಕೆಯಾದರೆ ಶುದ್ಧ ಕ್ಷೇತ್ರದಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ಸುಸಜ್ಜಿತ ರಸ್ತೆ, ವೃತ್ತಿಪರ ಹಾಗೂ ತಾಂತ್ರಿಕ ಶಿಕ್ಷಣ ಕಾಲೇಜುಗಳ ಮಂಜೂರಾತಿ, ಮಿನಿ ವಿಧಾನಸೌಧ ನಿರ್ಮಾಣ ಸೇರಿದಂತೆ ಮೂಲ ಸೌಲಭ್ಯಗಳನ್ನು ಒದಗಿಸುವೆ. ಎಲ್ಲಾ ವರ್ಗದ ಜನರ ಹಿತಕ್ಕಾಗಿ ಕೆಲಸ ಮಾಡುವ ಮೂಲಕ ಕ್ಷೇತ್ರದ ಸರ್ವಾಂಗೀಣ ಪ್ರಗತಿಗೆ ದುಡಿಯುವೆ’ ಎಂದು ಭರವಸೆ ನೀಡಿದರು.
ಸಿರವಾರದ ವಾಣಿಜ್ಯೋದ್ಯಮಿ ಲೋಕರೆಡ್ಡಿ, ಮಾನ್ವಿ ಪುರಸಭೆಯ ಮಾಜಿ ಅಧ್ಯಕ್ಷ ಮಹ್ಮದ್ ಇಸ್ಮಾಯಿಲ್ ಸೇರಿದಂತೆ ಅನೇಕ ಮುಖಂಡರು ತಮ್ಮ ಬೆಂಬಲಿಗರೊಂದಿಗೆ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳನ್ನು ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು.
ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ, ಗಂಗಾವತಿಯ ವಿಧಾನ ಪರಿಷತ್ ಮಾಜಿ ಸದಸ್ಯ ಎಚ್.ಆರ್.ಶ್ರೀನಾಥ, ಸಿಂಧನೂರಿನ ಮಾಜಿ ಶಾಸಕ ವೆಂಕಟರಾವ್ ನಾಡಗೌಡ, ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಮಹಾಂತೇಶ ಪಾಟೀಲ್ ಅತ್ತನೂರು, ಜೆಡಿಎಸ್ ಪಕ್ಷದ ಜಿಲ್ಲಾ ಅಧ್ಯಕ್ಷ ಎಂ.ವಿರೂಪಾಕ್ಷಿ, ತಾಲ್ಲೂಕು ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ್ ಬಲ್ಲಟಗಿ, ಲಕ್ಷ್ಮೀಪತಿ ಗಾಣದಾಳ, ಯೂಸುಫ್ ಖಾನ್, ಕೆ.ಎಂ.ಸೈಯದ್ ಕೊಪ್ಪಳ, ಪವನಕುಮಾರ ಎಂ.ಈರಣ್ಣ, ಜಂಬುನಾಥ ಯಾದವ್, ಪಕ್ಷದ ಜಿಲ್ಲಾ ಹಾಗೂ ತಾಲ್ಲೂಕು ಘಟಕಗಳ ಪದಾಧಿಕಾರಿಗಳು ಇದ್ದರು.