ಮಡಿಕೇರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ರಾತ್ರಿ ನಡೆದ ಸಭೆಯಲ್ಲಿ ಸಚಿವ ಎಚ್.ಡಿ. ರೇವಣ್ಣ ಅವರ ಮಾತಿಗೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಪ್ರತಿಕ್ರಿಯೆ ಹೀಗಿತ್ತು. – ಪ್ರಜಾವಾಣಿ ಚಿತ್ರ
ಪ್ರಜಾವಾಣಿ ವಾರ್ತೆ
ಮಡಿಕೇರಿ: ‘ಅಧಿಕಾರಿಗಳು ಪ್ರಾಮಾಣಿಕವಾಗಿ ಜನರ ಕಷ್ಟಗಳಿಗೆ ಸ್ಪಂದಿಸಿ ಕೆಲಸ ಮಾಡಬೇಕು’ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಎಚ್ಚರಿಕೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಮಳೆಹಾನಿ ಸಂಬಂಧಿಸಿದಂತೆ ಅಧಿಕಾರಿಗಳ ಜೊತೆ ನಡೆದ ಸಭೆಯಲ್ಲಿ ಮಾಹಿತಿ ಪಡೆದು ಮಾತನಾಡಿದರು.
‘ಅಧಿಕಾರಿಗಳು ಶ್ರದ್ಧೆಯಿಂದ ಕೆಲಸ ಮಾಡಿದ್ದಲ್ಲಿ ಸಾರ್ವಜನಿಕರಿಗೆ ಹೆಚ್ಚಿನ ಸೇವೆ ನೀಡಲು ಸಾಧ್ಯ. ಆ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಬೇಕು’ ಎಂದು ಕುಮಾರಸ್ವಾಮಿ ಹೇಳಿದರು.
‘ಮಳೆಯಿಂದ ಹಾನಿಯಾಗಿರುವ ರಸ್ತೆ, ಸೇತುವೆ, ವಾಸದ ಮನೆ, ಬೆಳೆಹಾನಿ, ವಿದ್ಯುತ್, ಸರ್ಕಾರಿ ಕಟ್ಟಡಗಳ ನಷ್ಟಕ್ಕೆ ಸಂಬಂಧಿಸಿದಂತೆ ಈಗಾಗಲೇ ಸುಮಾರು ₹326 ಕೋಟಿ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ. ಪರಿಹಾರ ಸಂಬಂಧ ಅಗತ್ಯ ಹಣ ಬಿಡುಗಡೆ ಮಾಡಲಾಗುವುದು’ ಎಂದು ಭರವಸೆ ನೀಡಿದರು.
ಜೂನ್, ಜುಲೈ ಎರಡು ತಿಂಗಳು ಕೃಷಿ ಅಧಿಕಾರಿಗಳು ಗ್ರಾಮೀಣ ಪ್ರದೇಶಗಳಿಗೆ ತೆರಳಿ ರೈತರಿಗೆ ಸಲಹೆ, ಮಾರ್ಗದರ್ಶನ ಹಾಗೂ ನೆರವು ನೀಡಬೇಕು. ಈ ಎರಡು ತಿಂಗಳುಗಳನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ ಕರ್ತವ್ಯ ಪ್ರಜ್ಞೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ಎಚ್ಚರಿಸಿದರು.
ಶಾಸಕ ಕೆ.ಜಿ. ಬೋಪಯ್ಯ ಮಾತನಾಡಿ, ‘ಮಳೆಹಾನಿ ಪರಿಹಾರ ಸಂಬಂಧಿಸಿದಂತೆ ತಹಶೀಲ್ದಾರ್ ನೇರವಾಗಿ ಪರಿಹಾರ ವಿತರಣೆ ಮಾಡಬೇಕು. ಉಪ ವಿಭಾಗಾಧಿಕಾರಿ ಅವರ ನೇತೃತ್ವದಲ್ಲಿ ಸಮಿತಿ ಅಗತ್ಯವಿಲ್ಲ’ ಎಂದು ಸಲಹೆ ಮಾಡಿದರು.
ಜಿಲ್ಲಾ ಪಂಚಾಯಿತಿ ನೂತನ ಭವನ ನಿರ್ಮಾಣ ಕಾಮಗಾರಿಯನ್ನು ಸೆಪ್ಟೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸಬೇಕು ಎಂದು ರೇವಣ್ಣ ಸೂಚಿಸಿದರು.
ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಕೊಡವ ಹೆರಿಟೇಜ್ ಕಟ್ಟಡ ಕಾಮಗಾರಿ ಅವರ ಗಮನಕ್ಕೆ ತಂದರು.
ಇದಕ್ಕೆ ಪ್ರತಿಕ್ರಿಯಿಸಿದ ಕುಮಾರ ಸ್ವಾಮಿ, ‘ಕೊಡವ ಹೆರಿಟೇಜ್ ಕಟ್ಟಡ ಸಂಬಂಧ ಗಂಭೀರವಾಗಿ ಪರಿಗಣಿಸ ಲಾಗುವುದು’ ಎಂದು ಹೇಳಿ, ಈ ಸಂಬಂಧ ವರದಿ ಕಳುಹಿಸಿಕೊಡುವಂತೆ ಲೋಕೋಪಯೋಗಿ ಇಲಾಖೆಯ ಎಂಜಿನಿಯರ್ಗೆ ಸೂಚಿಸಿದರು.
ಅಪ್ಪಚ್ಚು ರಂಜನ್ ಮಾತನಾಡಿ, ‘ಪೆರುಂಬಾಡಿ ಬಳಿ ಕಳೆದ ವರ್ಷ ₹25 ಲಕ್ಷ ವೆಚ್ಚದಲ್ಲಿ ಸೇತುವೆ ನಿರ್ಮಾಣ ಮಾಡಲಾಗಿದೆ. ಆದರೆ, ಇದು ವರೆಗೆ ಹಣ ಬಿಡುಗಡೆಯಾಗಿಲ್ಲ’ ಎಂದು ಮುಖ್ಯಮಂತ್ರಿ ಅವರ ಗಮನಕ್ಕೆ ತಂದರು. ಇದಕ್ಕೆ ರೇವಣ್ಣ ಅವರು ತಕ್ಷಣವೇ ಹಣ ಬಿಡುಗಡೆ ಮಾಡಲಾಗುವುದು ಎಂದು ಭರವಸೆ ನೀಡಿದರು.
ಜಿಲ್ಲಾಧಿಕಾರಿ ಪಿ.ಐ ಶ್ರೀವಿದ್ಯಾ ಮಾತನಾಡಿ, ‘ಮಳೆಯಿಂದ ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ₹1.8 ಕೋಟಿ, ಟೌನ್ ಪಂಚಾಯಿತಿ ವ್ಯಾಪ್ತಿಯಲ್ಲಿ ₹75 ಲಕ್ಷ, ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ₹48.42 ಕೋಟಿ, ಲೋಕೋಪಯೋಗಿ ಇಲಾಖೆ ವ್ಯಾಪ್ತಿಯಲ್ಲಿ ₹12.63 ಕೋಟಿ, ಸಣ್ಣ ನೀರಾವರಿ ಇಲಾಖೆ ವ್ಯಾಪ್ತಿಯಲ್ಲಿ ₹ 11.90 ಕೋಟಿ, ಸೆಸ್ಕ್ ವ್ಯಾಪ್ತಿಯಲ್ಲಿ ₹1.31 ಕೋಟಿ, ಪಿಎಂಜಿಎಸ್ವೈ ವ್ಯಾಪ್ತಿಯಲ್ಲಿ ₹ 7 ಲಕ್ಷ, ರಾಷ್ಟ್ರೀಯ ಹೆದ್ದಾರಿ ವಿಭಾಗದಲ್ಲಿ ₹1.13 ಕೋಟಿ ಸೇರಿದಂತೆ ಒಟ್ಟು ₹326 ಕೋಟಿ ನಷ್ಟ ಉಂಟಾಗಿದೆ’ ಎಂದು ಮಾಹಿತಿ ನೀಡಿದರು.
ವಿಧಾನ ಪರಿಷತ್ ಸದಸ್ಯ ಸುನೀಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಬೋಜೇಗೌಡ, ಜಿ.ಪಂ. ಅಧ್ಯಕ್ಷ ಬಿ.ಎ.ಹರೀಶ್, ಲೋಕೇಶ್ವರಿ ಗೋಪಾಲ್, ನಗರಸಭೆ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ ಹಾಜರಿದ್ದರು.